ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ ಬಂದಿದ್ದು, ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಂಬಂಧದ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ವಿಚಾರಣೆ ಮುಂದೂಡಿದೆ.
ನಟ ದರ್ಶನ್ ಅವರಿಗೆ ಮಂಗಳವಾರದ ಸುಪ್ರೀಂಕೋರ್ಟ್‌ಲ್ಲಿನ ವಿಚಾರಣೆ ಮಹತ್ವದಾಗಿತ್ತು. ಒಂದು ವೇಳೆ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದರೆ ನಟ ಜೈಲು ಸೇರಬೇಕಾಗಿತ್ತು. ಆದರೆ, ವಿಚಾರಣೆ ಮುಂದೂಡಿರುವುದರಿಂದ ಮೇ 14 ರವೆಗೆ ಅಂದರೆ 21 ದಿನ ರಿಲೀಫ್ ಸಿಕ್ಕಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ 5 ತಿಂಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಬಳಿಕ ಈ ಪ್ರಕರಣದ ಎಲ್ಲಾ ಆರೋಪಿಗಳಿಗೂ ಬೇಲ್ ಸಿಕ್ಕಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಇತ್ತೀಚೆಗೆ ಏ.8ರಂದು ನಗರದ 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್‌ಗೆ ಹಾಜರಾಗಿದ್ದರು. ಆದರೆ ದರ್ಶನ್ ಮಾತ್ರ ಗೈರಾಗಿದ್ದರು