ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.
ಸಿಬಿಐ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿದಾರ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡಿತು.
ರಾಜಕೀಯ ಲಾಭ ಪಡೆಯಲು ಇಂತಹ ಅರ್ಜಿ ಹಾಕುತ್ತೀರಾ? ರಾಜಕೀಯ ಮಾಡುವುದಾದರೆ ಹೊರಗೆ ಮಾಡಿ. ನಮ್ಮ ಸಮಯ ಯಾಕೆ ವ್ಯರ್ಥ ಮಾಡುತ್ತೀರಾ ಎಂದು ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿತು.
ಬಿಜೆಪಿ ಸರ್ಕಾರವು ಡಿಕೆ ಶಿವಕುಮಾರ್ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿತ್ತು.
ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿತ್ತು.