Menu

ಮಂತ್ರಾಲಯ ಸನ್ನಿಧಿಗೆ ತೆರಳುತ್ತಿದ್ದ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ: ಚಿಕ್ಕಮಗಳೂರಿನ ಎಂಟು ಮಂದಿ ಸಾವು

ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರಿನ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಶ್ರೀ ಗುರು ರಾಘವೇಂದ್ರ ಸನ್ನಿಧಿ ಮಂತ್ರಾಲಯ ಕ್ಷೇತ್ರದಲ್ಲಿ ಗುರುಗಳ ದರ್ಶನಕ್ಕಾಗಿ ತೆರಳುತ್ತಿದ್ದ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಚಿಕ್ಕಮಗಳೂರಿನ ಜಿಲ್ಲೆಯಿಂದ 21 ಮಂದಿ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಕಲ್ಲುದೇವಕುಂಟ ಗ್ರಾಮದ ಬಳಿ ಎದುರುಗಡೆಯಿಂದ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಮಂದಿಯನ್ನು ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕರ್ನೂಲಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಪೊಲೀಸರು ಶೋಧ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *