ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.
ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಹೊಟ್ಟೆಯ ಮೇಲ್ಭಾಗದ ಗುಲ್ಮದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೇಯಸ್ ಅಯ್ಯರ್ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ರಕ್ತಸ್ರಾವ ಕಡಿಮೆಯಾಗದಿದ್ದರೆ ಇನ್ನೂ ಕೆಲವು ದಿನ ಆಸ್ಪತ್ರೆಯಲ್ಲೇ ಇರಬೇಕಾಗಬಹುದು. ಬಿಸಿಸಿಐ ವೈದ್ಯಕೀಯ ತಂಡವು ಸಿಡ್ನಿ ಮತ್ತು ಭಾರತದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚಿಸಿ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಭಾರತೀಯ ತಂಡದ ವೈದ್ಯರು ಸಿಡ್ನಿಯಲ್ಲಿಯೇ ಇರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.
ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿತ್ತು.
ಈ ನಡುವೆ ಶ್ರೇಯಸ್ ಅಯ್ಯರ್ ಪೋಷಕರು ತುರ್ತು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸಿಡ್ನಿಗೆ ತೆರಳಲಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.


