ಗೃಹ ಸಚಿವ @DrParameshwara ಅವರೇ, ಬೆಂಗಳೂರಿನಲ್ಲಿ ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಸ್ವತಃ ಅಕ್ರಮ ವಲಸಿಗರೇ ಒಪ್ಪಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ಒಂದು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಆಗ್ರಹಿಸುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಬಳಸಿಕೊಂಡು ಮಾನವ ಕಳ್ಳಸಾಗಣೆಯಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ನುಸುಳುಕೋರರು ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೇಳುತ್ತಿದ್ದಾರೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ನಮ್ಮ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ, ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರ ದುಷ್ಪರಿಣಾಮ ಬೀರುವುದು ಕಟ್ಟಿಟ್ಟ ಬುತ್ತಿ ಎಂದು ಬರೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯನ್ನ ಗಂಭೀರವಾಗಿ ಪರಿಗಣಿಸಬೇಕು. ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ, ತುಷ್ಟೀಕರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡದೆ, ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ಒಂದು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.


