Menu

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಪಾಲಿಕೆ ಆಯುಕ್ತರಿಗೆ ಭೈರತಿ ಸುರೇಶ್ ಸೂಚನೆ

bhirati suresh

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ ನಾಗರಿಕರಿಂದ ದೂರುಗಳು ಬಂದ ತಕ್ಷಣವೇ ಸಮಸ್ಯೆಗಳನ್ನು ಪರಿಹರಿಸಬೇಕು. ಯಾವುದೇ ಕಾರಣಕ್ಕೂ ನಾಗರಿಕರು ಇಲಾಖೆಯ ಕೇಂದ್ರ ಕಚೇರಿಯವರೆಗೆ ಸಮಸ್ಯೆಗಳನ್ನು ಹೊತ್ತು ತರಬಾರದು ಎಂದು ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಕಾಲಮಿತಿಯಲ್ಲಿ ಬಳಕೆ ಮಾಡಿ, ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು. ಈ ಕರ್ತವ್ಯದಿಂದ ಯಾರೂ ನುಣುಚಿಕೊಳ್ಳಬಾರದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಇದೇ ವೇಳೆ ಕೇಂದ್ರ ಯೋಜನೆಗಳ ಬಗ್ಗೆಯೂ ಗಮನಹರಿಸಬೇಕು ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ಸಮಸ್ಯೆ, ರಸ್ತೆಗಳ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಯಾವುದೇ ಲೋಪವಾಗದ ರೀತಿಯಲ್ಲಿ ಕೈಗೊಳ್ಳಬೇಕು. ಇದೇ ವೇಳೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ-ಖಾತಾ ಸೌಲಭ್ಯವನ್ನು ಅರ್ಹ ನಾಗರಿಕರಿಗೆ ವಿತರಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ತಿಳಿಸಿದರು.

ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಬೇಕೆಂದು ಸೂಚಿಸಿದ ಸಚಿವರು, ಪಾಲಿಕೆಗಳ ಸಿಬ್ಬಂದಿ ಸಮಸ್ಯೆಗಳನ್ನೂ ಆಲಿಸಿದರು. ಸರ್ಕಾರದಿಂದ ಬರುವ ಅನುದಾನವನ್ನು ಸೂಕ್ತ ಸಮಗ್ರ ಯೋಜನೆಯನ್ನು ಸಿದ್ಧಪಡಿಸಿ ಆ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, 10 ಪಾಲಿಕೆ ಆಯುಕ್ತರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published. Required fields are marked *