ಮರು ಭೂಮಿ ಸೌದಿ ಅರೇಬಿಯಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮೆಕ್ಕಾ, ರಿಯಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಪ್ರವಾಹದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಪ್ರಯಾಣಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮೆಕ್ಕಾ ಪ್ರದೇಶಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾದರೆ, ತೈಫ್, ಮೈಸಾನ್, ಅಲ್-ಮುವೈಹ್, ತುರ್ಬಾ, ಅಲ್ಲೈತ್, ಖುನ್ಫುದ, ಜಿದ್ದಾ, ರಾಬಿಗ್ ಮುಂತಾದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಬೀಳುವ ಮುನ್ಸೂಚನೆ ನೀಡಲಾಗಿದೆ. ರಿಯಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಪ್ರವಾಹ, ಆಲಿಕಲ್ಲು ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸೌದಿಯ ಪೂರ್ವ ಪ್ರಾಂತ್ಯಗಳಾದ ಖಾಸಿಮ್, ಹೈಲ್, ಉತ್ತರ ಗಡಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಅಲ್ ಜೌಫ್, ಮದೀನಾ, ಅಲ್ ಬಹಾ ಪ್ರದೇಶಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಪ್ರವಾಹದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಅಥವಾ ಕಣಿವೆ ಪ್ರದೇಶಗಳಲ್ಲಿ ಪ್ರಯಾಣಿಸುವುದನ್ನು ಮತ್ತು ಈಜು ಮುಂತಾದ ಚಟುವಟಿಕೆಗಳಲ್ಲಿ ತೊಡಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಹವಾಮಾನ ಎಚ್ಚರಿಕೆಗಳನ್ನು ಅಧಿಕೃತ ಪೋರ್ಟಲ್‌ಗಳು ಅಥವಾ ಸಾಮಾಜಿಕ ಮಾಧ್ಯಮಗಳ ಮೂಲಕ ಅನುಸರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ರಾಜಧಾನಿ ರಿಯಾದ್ ಮತ್ತು ಸುತ್ತಮುತ್ತಲಿನ ಪ್ರಾಂತ್ಯಗಳಲ್ಲಿ ಪ್ರವಾಹದಿಂದಾಗಿ ತುರ್ತು ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀರು ಹರಿದು ಹೋಗಲು ಚರಂಡಿಗಳನ್ನು ಸುಸ್ಥಿತಿಯಲ್ಲಿಡಲಾಗಿದೆ, ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಳೆಯಿಂದಾಗಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಪ್ರಮುಖ ಸ್ಥಳಗಳಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.