ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. ಈಗ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀರು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರಿನ ಚಿಕ್ಕಬಾಣಾವರದ ಆಟೊ ಚಾಲಕ ಚಂದ್ರು, ದಾವಣಗೆರೆಯ ಎಂಜಿನಿಯರ್ ನಿತಿನ್ ಬಂಧಿತರು. ವಿಜಯಲಕ್ಷ್ಮೀ ಅವರು ದೂರು ನೀಡಿದ ಬಳಿಕ ಆರೋಪಿಗಳಿಬ್ಬರು ಪೋಸ್ಟ್ಗಳನ್ನು ಡಿಲೀಟ್ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಐಪಿ ಅಡ್ರೆಸ್ ಮೂಲಕ ಇವರನ್ನು ಪತ್ತೆ ಹಚ್ಚಿ ಬಮಧಿಸಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಅರೆಸ್ಟ್ ಆಗುವ ಸಾಧ್ಯತೆ ಇದೆ.
ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ನಂಬಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ. ನಾನು ಸಲ್ಲಿಸಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಬೇರೆ ಮಹಿಳೆ ನೀಡಿದ ಮತ್ತೊಂದು ದೂರಿನ ಮೇಲೆ ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ ವಕೀಲರು ನಿರಂತರವಾಗಿ ಪರಿಶೀಲನೆ ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಜಯಲಕ್ಷ್ಮೀ ಆರೋಪಿಸಿದ್ದರು.
“ಪೊಲೀಸರು ಕೇವಲ ಕೆಲವರಿಗಲ್ಲ, ಎಲ್ಲರಿಗಾಗಿಯೂ ಇದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ವಿರುದ್ಧ ಮಾಡಿದ್ದ ಆರೋಪಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದರು.


