ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಭದ್ರಾ ಕಾಲುವೆಗೆ ಕಾರು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತಪಟ್ಟವರು.
ದಾವಣಗೆರೆಯ ಆರು ಜನ ಮಂಗಳೂರು ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ನಡೆದಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಅಸು ನೀಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಲುವೆಯಿಂದ ಕಾರು ಹಾಗೂ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಡಿಕ್ಕಿಯಾಗಿ ಮಹಿಳೆ ಸಾವು
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಕಿತ್ತಾಗನಹಳ್ಳಿ ಗೇಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಪೋಸ್ಟ್ ವುಮೆನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಿಯಾ ಮೃತಪಟ್ಟ ಪೋಸ್ಟ್ ವುಮೆನ್.
ಬೈಕ್‌ನಲ್ಲಿ ಪೋಸ್ಟ್‌ಗಳನ್ನ ಕೊಡಲು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಪೋಸ್ಟ್ ವುಮೆನ್ ಪ್ರಿಯಾ ಹೆದ್ದಾರಿಗೆ ಬಿದಿದ್ದು, ಲಾರಿ ಚಕ್ರ ಹರಿದು ಸ್ಥಳದಲ್ಲಿಯೇ ಅಸು ನೀಗಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


