ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಲಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು ಹೀಗಿವೆ;
- ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.
- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
- ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.
- ಜನ ಮತ್ತು ಜಾನವಾರುಗಳ ಪ್ರಾಣ ರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಗತ್ಯವಿರುವ ಎಲ್ಲಾ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
- ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವು ಸೇರಿದಂತೆ ತಾತ್ಕಾಲಿಕ ಸೂರು ಕಲ್ಪಿಸಬೇಕು.
ಕಳೆದ ಮೂರು ದಿನಗಳಿಂದ ಬೆನ್ನುಟ್ಟುತ್ತಿರುವ ಮಳೆರಾಯನ ಆರ್ಭಟಕ್ಕೆ ಉತ್ತರ ಕರ್ನಾಟಕ ಜನ ಕಂಗಾಲಾಗಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಪ್ರವಾಹ ಹಾಗೂ ಮಳೆಯಿಂದಾಗಿ ಜಾನುವಾರುಗಳ ನಷ್ಟವೂ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಮತ್ತೋರ್ವ ಬಾಲಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.