ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ರನ್ಯಾ ರಾವ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದ್ದರೂ ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರ ನ್ಯಾಯಾಲಯದ ಮುಂದೆ ಬರಲಿದೆ.
ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ಈಚೆಗೆ ಬೆಂಗಳೂರು ಏರ್ಪೋರ್ಟ್ನಲ್ಲಿ ನಟಿ ರನ್ಯಾಳನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು.
ವಿಚಾರಣೆ ವೇಳೆ ತಮ್ಮ ಮೇಲೆ ದೈಹಿಕ ಹಲ್ಲೆ ಆಗಿದೆ ಎಂಬ ವರದಿಗಳನ್ನು ನ್ಯಾಯಾಲಯದಲ್ಲಿ ನಿರಾಕರಿಸಿದ್ದು, ಅಧಿಕಾರಿಗಳ ನಿಂದನೆ ಹಾಗೂ ಮಾನಸಿಕ ಕಿರುಕುಳದಿಂದ ಆಘಾತಕ್ಕೆ ಒಳಗಾಗಿದ್ದೇನೆ ಎಂದು ಕಣ್ಣೀರು ಹಾಕಿದ್ದಾರೆ.
ರನ್ಯಾ ಆರೋಪವನ್ನು ತಿರಸ್ಕರಿಸಿದ ಡಿಆರ್ ಐ ಅಧಿಕಾರಿಗಳು ಪ್ರಕರಣದ ಪ್ರತಿಯೊಂದು ಹಂತವನ್ನು ವಿಡಿಯೋ ಮಾಡಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ರನ್ಯಾ ರಾವ್ ಗೆ ಕಸ್ಟಡಿಯಲ್ಲಿ ದೈಹಿಕ ಹಲ್ಲೆ ಆಗಿದೆ ಎಂಬ ಬಗ್ಗೆ ಲಿಖಿತ ದೂರು ಬಾರದೇ ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ತಿಳಿಸಿದ್ದಾರೆ.