ಬೆಂಗಳೂರು:ಅಫೆಕ್ಸ್ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪ ಸಂಬಂಧ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಅನುಮತಿ ನೀಡಿದೆ.
ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರಿದ್ದ ನ್ಯಾಯಪೀಠವು ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಆದೇಶ ನೀಡಿದೆ. ಅಲ್ಲದೆ, ಸಿಐಡಿ ಪೊಲೀಸರು ನಡೆಸಿದ ತನಿಖೆಗೆ ಅರ್ಜಿದಾರರು ಸಹಕರಿಸಿದ್ದು, ತನಿಖೆ ಪೂರ್ಣಗೊಂಡಿದೆ. ಆರೋಪಪಟ್ಟಿ ಸಲ್ಲಿಕೆಗೆ ಸಿದ್ಧವಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಹುದಾಗಿದೆ. ಆದರೆ, ವಿಶೇಷ ನ್ಯಾಯಾಲಯವು ಆರೋಪ ಪಟ್ಟಿ ಕುರಿತು ಮುಂದಿನ ಆದೇಶದವರೆಗೂ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ದೋಷಮುಕ್ತ ಮಾಡಲಾಗಿದೆಯೇ? ಇಲ್ಲವೇ, ಆರೋಪಿಯನ್ನಾಗಿಸಲಾಗಿದೆಯೇ ಎಂದು ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ವಕೀಲರು, ಪ್ರಕರಣ ಸಂಬಂಧ 2,000 ಪುಟಗಳ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಿಪಡಿಸಿ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಎಫ್‌ಐಆರ್ ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪ್ರಸ್ತುತ ಅರ್ಜಿಯ ಮೂಲ ಉದ್ದೇಶ ವಿಫಲವಾಗಲಿದೆ ಎಂದು ವಾದ ಮಂಡಿಸಿದರು.
ಈ ವೇಳೆ ಸರ್ಕಾರಿ ವಕೀಲರು, ಅರ್ಜಿದಾರರು ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ಈ ಮೇಲಿನಂತೆ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ:
ಕರ್ನಾಟಕ ಸಹಕಾರ ಬ್ಯಾಂಕ್‌ನಿಂದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಪರವಾಗಿ ರಮೇಶ್ ಜಾರಕಿಹೊಳಿ 439 ಕೋಟಿ ಸಾಲ ಪಡೆದಿದ್ದರು. ನಂತರ ಸಾಲ ಪಡೆದ ಸಂದರ್ಭದಲ್ಲಿ ಬ್ಯಾಂಕ್ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸಂಬಂಧ ಅರ್ಜಿದಾರ ರಮೇಶ್ ಜಾರಕಿಹೊಳಿ, ವಸಂತ್ ವಿ.ಪಾಟೀಲ್ ಮತ್ತು ಶಂಕರ್ ಪಾವಡೆ ಎಂಬುವರ ವಿರುದ್ಧ ಬೆಂಗಳೂರಿನ ವಿಶ್ವೇಶ್ವರ ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಐಪಿಸಿ 406, 420 ಮತ್ತು 34ರ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಅರ್ಜಿ ಸಂಬಂಧ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ನಿರ್ದೇಶಕರ ಸ್ಥಾನಕ್ಕೆ ಅರ್ಜಿದಾರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಾಲ ಪಡೆದ ಸಂದರ್ಭದಲ್ಲಿ ನಿರ್ದೇಶಕರಾಗಿದ್ದು, ಬಳಿಕ ಸಾಲ ಮರು ಪಾವತಿಗೂ ಮುನ್ನ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದೇ ಅಪರಾಧ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಪಡೆದ ಸಾಲವನ್ನು ಮರು ಪಾವತಿ ಮಾಡುವವರೆಗೂ ಅವರು ಖಾತರಿದಾರರಾಗಿ ಮುಂದುವರೆಯಲಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಭರವಸೆಯನ್ನೂ ನೀಡಿದ್ದಾರೆ. ಆದರೆ, ಕಂಪೆನಿಯ ನಿರ್ದೇಶಕರಾಗಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಿರ್ದೇಶಕರಾಗಿರದಿದ್ದರೂ, ಪಡೆದ ಸಾಲಕ್ಕೆ ಜವಾಬ್ದಾರರಾಗಿ ಹೊಣೆಗಾರರಾಗಿರುತ್ತಾರೆ ಎಂಬುದಾಗಿ ಸಾಲ ನೀಡಿದ ಸಂದರ್ಭದಲ್ಲಿ ಹೇಳಲಾಗಿದೆ ಎಂದು ವಿವರಿಸಿದರು.