ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಕಿಡಿ ಕಾರಿದ ಸುಪ್ರೀಂಕೋರ್ಟ್, ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ ಕೋರ್ಟ್, ಕರ್ತವ್ಯದಲ್ಲಿರುವ ನ್ಯಾಯಾಂಗ ಅಧಿಕಾರಿಗಳಿಗೆ ರಕ್ಷಣೆ ನೀಡಲು ವಿಫಲರಾಗಿದ್ದಕ್ಕೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ದಾಳಿಯ ಬಗ್ಗೆ ಕೇಂದ್ರೀಯ ತನಿಖಾ ದಳ ಅಥವಾ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಕೋಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರು ಪತ್ರ ಬರೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರನೆಗೆ ಎತ್ತಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠವು, ಈ ಘಟನೆಯು ನ್ಯಾಯಾಲಯದ ಅಧಿಕಾರವನ್ನು ಪ್ರಶ್ನಿಸಲು ಮಾಡಿದ ಲಜ್ಜೆಗೆಟ್ಟ ಪ್ರಯತ್ನ ಎಂದು ಕಿಡಿಕಾರಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಇದು ಕೇವಲ ಪ್ರತಿಭಟನೆಯಲ್ಲ, ಬದಲಿಗೆ ನ್ಯಾಯಾಂಗ ಅಧಿಕಾರಿಗಳ ಮನೋಬಲ ಕುಂದಿಸಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ನಡೆಸಿದ ಪೂರ್ವಯೋಜಿತ ಮತ್ತು ಸಂಘಟಿತ ಪ್ರಯತ್ನ ಎಂದು ಅಭಿಪ್ರಾಯಪಟ್ಟಿದೆ.
ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹಾಕಿದ್ದೇ ಪ್ರತಿಭಟನೆಗೆ ಕಾರಣದೆ ಎಂಬ ಮಾಧ್ಯಮಗಳ ವರದಿ ಉಲ್ಲೇಖಿಸಿರುವ ಕೋರ್ಟ್, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಯ ಅನುಪಸ್ಥಿತಿಯನ್ನು ಟೀಕಿಸಿದೆ. ಕುಟುಂಬಕ್ಕೆ ಬೆದರಿಕೆಯ ಬಗ್ಗೆ ಅನುಮಾನವಿರುವ ನ್ಯಾಯಾಂಗ ಅಧಿಕಾರಿಯ ನಿವಾಸದ ಮೇಲೆ ಚುನಾವಣಾ ಆಯೋಗವು ಪಡೆಗಳನ್ನು ನಿಯೋಜಿಸಬೇಕು. ನ್ಯಾಯಾಂಗ ಅಧಿಕಾರಿಗಳಿಗೆ ವಹಿಸಲಾಗಿರುವ ಕಾರ್ಯದ ಸುರಕ್ಷಿತ ಕಾರ್ಯನಿರ್ವಹಣೆಗಾಗಿ ಇಸಿಐ ಮತ್ತು ರಾಜ್ಯ ಸರ್ಕಾರವು ಎಲ್ಲಾ ಪರಿಹಾರ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯವು ಹೇಳಿದೆ.
ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸಲು ಸೂಚಿಸಿರುವ ನ್ಯಾಯಾಲಯ, ಮುಖ್ಯ ಕಾರ್ಯದರ್ಶಿ, ಡಿಜಿಪಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಎಸ್ಪಿಗಳಿಗೆ ಕ್ರಮ ಕೈಗೊಳ್ಳದಿರಲು ಕಾರಣ ತಿಳಿಸುವಂತೆ ಸೂಚಿಸಿ ಏಪ್ರಿಲ್ 6 ರಂದು ಆನ್ಲೈನ್ನಲ್ಲಿ ಹಾಜರಿರುವಂತೆ ನಿರ್ದೇಶನ ನೀಡಿದೆ.


