ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ: ಕೇಂದ್ರದಿಂದ ಹಣ ಬಿಡುಗಡೆಗೆ ರಮೇಶ್‌ ಜಾರಕಿಹೊಳಿ ಮನವಿ


ಬೆಂಗಳೂರು: ನಾರಾಯಣಪುರ ಎಡದಂಡೆ ಕಾಲುವೆ ಜಾಲ ಯೋಜನೆಗೆ 2020-21 ನೇ ಸಾಲಿನ ಕೇಂದ್ರ ಸರ್ಕಾರದ ಹಣವನ್ನು ಬಿಡುಗಡೆ ಮಾಡುವಂತೆ ಸೂಚಿಸಿ ಜಲಶಕ್ತಿ ಸಚಿವಾಲಯಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಲಿದ್ದಾರೆ‌.
ನವದೆಹಲಿ ಪ್ರವಾಸದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಭೇಟಿ ನೀಡಿ, ನಾರಾಯಣಪುರ ಎಡದಂಡೆ ಕಾಲುವೆ ಜಾಲದ ಯೋಜನೆ ಕುರಿತು ಚರ್ಚೆ ನಡೆಸಲಿದ್ದಾರೆ. ಜೊತೆಗೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರದ ನೆರವಿನ ಪಾಲಿನ 218.97 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಲಶಕ್ತಿ ಸಚಿವಾಲಯಕ್ಕೆ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇತರೆ ಮನವಿಗಳು:
1. ಮೇಕೆದಾಟು, ಸಮತೋಲನ ಜಲಾಶಯ ಯೋಜನೆ, ಕುಡಿಯುವ ನೀರಿನ ಯೋಜನೆಗೆ ಅನುಮತಿಗಳನ್ನು ನೀಡಬೇಕು.
2. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತವನ್ನು ಮೇಲ್ದರ್ಜೆಗೇರಿಸುವುದು ಮತ್ತು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದು.
3. ಭದ್ರ ಮೇಲ್ದಂಡೆ ಯೋಜನೆಗೆ ಅನುಮತಿ ನೀಡುವುದು ಮತ್ತು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದು.
4. ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಒಪ್ಪಂದ.
5. ಪ್ರಧಾನಮಂತ್ರಿ ಕೃಷಿ ಸಂಚಯಿ- ತ್ವರಿತ ನೀರು ಸರಬರಾಜು ಯೋಜನೆ ಅಡಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ಆಧುನೀಕರಣ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ.

Leave a Reply

Your email address will not be published. Required fields are marked *