ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿ ಮೋದಿ ಈ ಅಕ್ರಮಗಳ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಹೇಳಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಜನತೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ. ಇನ್ನು ನಂಬಿಕೆ ಇಲ್ಲದಿರುವಾಗ ಅದೇ ವ್ಯವಸ್ಥೆ ನೀಡುವ ಪರಿಹಾರಗಳನ್ನು ವಿದ್ಯಾರ್ಥಿಗಳು ಹೇಗೆ ತಾನೆ ಒಪ್ಪಿಕೊಳ್ಳಲು ಸಾಧ್ಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪರೀಕ್ಷಾ ಅಕ್ರಮಗಳ ತಡೆಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಾಗೂ ಪ್ರಕರಣಗಳತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿರುವುದಕ್ಕೆ ಪ್ರಿಯಾಂಕಾ ಗಾಂಧಿ ಹೀಗೆ ತಿರುಗೇಟು ನೀಡಿದ್ದಾರೆ. ಪೇಪರ್ ಲೀಕ್ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಯಾವುದೇ ನಿರ್ಣಾಯಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಮಕ್ಕಳು ಮತ್ತು ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಮೇಲಿನ ನಂಬಿಕೆಯು ಸಂಪೂರ್ಣವಾಗಿ ಮುರಿದುಹೋಗಿದೆ. ನಂಬಿಕೆ ಇಲ್ಲದಿರುವಾಗ, ಅದೇ ವ್ಯವಸ್ಥೆ ನೀಡುವ ಪರಿಹಾರಗಳನ್ನು ವಿದ್ಯಾರ್ಥಿಗಳು ಹೇಗೆ ತಾನೆ ಒಪ್ಪಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಗಂಭೀರ ಸಮಸ್ಯೆಯನ್ನು ಕೇವಲ ರಾಜಕೀಯವಾಗಿ ನೋಡದೆ, ಪ್ರತಿಯೊಬ್ಬ ತಂದೆ-ತಾಯಿ ಹಾಗೂ ವಿದ್ಯಾರ್ಥಿಗಳ ಆಳವಾದ ನೋವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರಕ್ಕೆ ನಿಜವಾಗಿಯೂ ಸಮಸ್ಯೆಗೆ ಪರಿಹಾರ ಬೇಕಿದ್ದರೆ, ಮೊದಲು ಯುವಜನರ ಮಾತನ್ನು ಆಲಿಸಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದ ಸಾವಿರಾರು ವಿದ್ಯಾರ್ಥಿಗಳು ಇಂಡಿಯಾ ಗೇಟ್, ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ಬೀದಿಗಿಳಿದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಾಯಕರು ತಮ್ಮ ಅಹಂ ಹಾಗೂ ಭಯವನ್ನು ಬದಿಗಿಟ್ಟು ಜನರ ಧ್ವನಿಯನ್ನು ಆಲಿಸಬೇಕಿದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಹಾಗೂ ರಾತ್ರೋರಾತ್ರಿ ಅವರನ್ನು ವಶಕ್ಕೆ ಪಡೆದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


