ನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ.
ಕೆಲವು ದಿನಗಳ ಹಿಂದೆ ಬಿಸಿಸಿಐಗೆ ಮಾಹಿತಿ ರವಾನಿಸಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನವೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಸಂದೇಶ ರವಾನಿಸಿದ್ದಾರೆ.
ವಿರಾಟ್ ಕೊಹ್ಲಿ ನಿವೃತ್ತಿ ಸುಳಿವು ನೀಡಿದ ಹಿನ್ನೆಲೆಯಲ್ಲಿ ಜೂನ್ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಏಕಕಾಲಕ್ಕೆ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದರು. ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಬೆನ್ನಲ್ಲೇ ಕ್ರಿಕೆಟ್ ಗೆ ವಿದಾಯ ಘೋಷಿಸುತ್ತಾರೆ ಎಂಬ ವದಂತಿ ಹರಡಿತ್ತು. ಇದೀಗ ರೋಹಿತ್ ಶರ್ಮ ಬೆನ್ನಲ್ಲೇ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗುವ ನಿರ್ಧಾರ ಕೈಗೊಂಡಿದ್ದಾರೆ.
ವಿರಾಟ್ ಕೊಹ್ಲಿ ಜೊತೆ ಬಿಸಿಸಿಐ ಹಿರಿಯ ಅಧಿಕಾರಿ ಮಾತುಕತೆ ನಡೆಸಿದ್ದು, ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದ್ದರಿಂದ ಕೊಹ್ಲಿ ನಿವೃತ್ತಿ ಕುರಿತು ಗೊಂದಲಗಳು ಮುಂದುವರಿದಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವ ಬಗ್ಗೆ ತಿಳಿದು ಬರಬೇಕಿದೆ.
ಟೆಸ್ಟ್ ಚಾಂಪಿಯನ್ ಶಿಪ್ ನ ಎರಡು ವರ್ಷಗಳ ಟೂರ್ನಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಂತಿಮ ತಂಡ ಪ್ರಕಟಿಸಲು ಸಭೆ ನಡೆಸುವ ಮುನ್ನ ಕೊಹ್ಲಿ ಈ ನಿರ್ಧಾರ ತಿಳಿಸಿರುವುದು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಬಿಸಿಸಿಐ ಮೂಲಗಳ ಪ್ರಕಾರ ಮೇ ಕೊನೆಯ ವಾರದಲ್ಲಿ ಟೆ್ಸ್ಟ್ ಟೂರ್ನಿಗೆ ಭಾರತ ತಂಡ ಪ್ರಕಟವಾಗಲಿದೆ.