Menu

ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ “ಜೈ ಬಾಂಗ್ಲಾ” ಎಂದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಹುಲಿಮಂಗಲ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆ ನಡೆಸುವ ವೇಳೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ಪ್ರದೇಶದಲ್ಲಿ ವಾಸವಾಗಿದ್ದ ಶರ್ಬಾನು ಖತನ್ ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಹೊರವಲಯದ ಹಲವೆಡೆ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ತೆರವುಗೊಳಿಸಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿತ್ತು. ಹುಲಿಮಂಗಲ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹಿಳೆ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾಳೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಮನಗಂಡು ಎಚ್ಚೆತ್ತ ಹೆಬ್ಬಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ವಾಸಸ್ಥಳದ ದಾಖಲೆಗಳನ್ನು ಪರಿಶೀಲಿಸಿದಾಗ ಆಕೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರುವುದು ಮತ್ತು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ನಗರದಲ್ಲಿ ನೆಲೆಸಿರುವುದು ಗೊತ್ತಾಗಿದೆ.  ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಕೋಗಿಲು, ಥಣಿಸಂದ್ರ, ನಾಗರಬಾವಿ ಮತ್ತು ಬಿಟಿಎಂ ಲೇಔಟ್‌ ಪ್ರದೇಶಗಳಲ್ಲಿ ಬಿಡಿಎ ಮತ್ತು ಇತರ ಪ್ರಾಧಿಕಾರಗಳು ಕಾರ್ಯಾಚರಣೆ ನಡೆಸಿದ್ದು, ಸರ್ಕಾರಿ ಜಮೀನು ಒತ್ತುವರಿ ಮಾಡಿ ನಿರ್ಮಿಸಿದ್ದ ಮನೆಗಳು, ಶೆಡ್‌ಗಳನ್ನು ನೆಲಸಮ ಮಾಡಿದೆ. ಅಕ್ರಮ ವಲಸಿಗರ ವಿರುದ್ಧವೂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *