ಬೆಳಗಾವಿ: ಇಲ್ಲಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕ್ರಶಿಂಗ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಹುಕ್ಕೇರಿ ತಾಲ್ಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಸಚೀನ ಬಸಪ್ಪ ದ್ಯಾಮಣ್ಣಿ (36) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಸಚೀನ ಅವರು ಕಳೆದ 10 ದಿನಗಳ ಹಿಂದೆಯಷ್ಟೇ ದಿನಗೂಲಿ ಆಧಾರದ ಮೇಲೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಸೋಮವಾರ ಕ್ರಶಿಂಗ್ ಬೆಲ್ಟ್ ವಿಭಾಗದಲ್ಲಿ ಸುಣ್ಣ ಹಾಕುವ ಕೆಲಸದಲ್ಲಿ ತೊಡಗಿದ್ದಾಗ, ಆಯತಪ್ಪಿ ಚಲಿಸುತ್ತಿದ್ದ ಬೆಲ್ಟ್ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಂತ್ರಕ್ಕೆ ಸಿಲುಕಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸಂಕೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕಾರ್ಖಾನೆಯ ಸುರಕ್ಷತಾ ಕ್ರಮಗಳ ಕುರಿತು ತನಿಖೆ ಕೈಗೊಳ್ಳಲಾಗಿದೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


