ಬೆಂಗಳೂರು: ಅವಧಿಗೂ ಮುನ್ನ ಕಾಲಿರಿಸಿದ ಮುಂಗಾರು ಮಳೆಯ ಅಬ್ಬರ ಕರಾವಳಿ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಳಿಮುಖ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಬಿರುಸು ಕಡಿಮೆಯಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾರಣವಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಮತ್ತು ಉತ್ತರ ಒಳನಾಡಿನ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಆಗುಂಬೆ 6, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ 5, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.