ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಬೈಕ್‌ನಿಂದ ಯುವತಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಕೇರಳದ ಮೇಧಾ (32) ಮೃತಪಟ್ಟವರು. ಆಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಅಜಯ್ ಗುರು ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮುಂದೆ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮೇಧಾ ರಸ್ತೆಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಗೂಡ್ಸ್ ವಾಹನ ಯುವತಿ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅನಂತ ನಗರದ ಪ್ರಮುಖ ರಸ್ತೆಯು ಸಂಪೂರ್ಣವಾಗಿ ಹಳ್ಳ-ಗುಂಡಿಗಳಿಂದ ಕೂಡಿದ್ದು, ಸವಾರರು, ಸಾರ್ವಜನಿಕರು ಅಪಾಯದಲ್ಲೇ ಸಂಚರಿಸಬೇಕಾದ ಸ್ಥಿತಿ ಇದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


